ಮರಾಠ ಅಭಿವೃದ್ಧಿ ಪ್ರಾಧಿಕಾರ ಹಿಂಪಡೆಯಲುಆಗ್ರಹಿಸಿ ಕನ್ನಡಪರ ಸಂಘಟನೆ ನೇತೃತ್ವದಲ್ಲಿ ಉಗ್ರ ಪ್ರತಿಭಟನೆ.

ಬೆಂಗಳೂರು : ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಿರುವ ಸರ್ಕಾರ ಈ ಕೂಡಲೇ ಹಿಂತೆಗೆದುಕೊಳ್ಳಬೇಕು, ಇಲ್ಲವಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬುದಾಗಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು.
ನಗರದ ಮೈಸೂರು ಬ್ಯಾಂಕ್ ವೃತ್ತದ ಬಳಿ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಅವರು ಮಾತನಾಡಿದರು.
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು ನವಂಬರ್ 27 ರ ಒಳಗೆ ಪ್ರಾಧಿಕಾರ ಹಿಂತೆಗೆದುಕೊಳ್ಳದಿದ್ದರೆ ಡಿಸೆಂಬರ್ 5ರಂದು ಅಖಿಲ ಕರ್ನಾಟಕ ಬಂದ್ ಗೆ ಕರೆ ಮಾಡಿ, ಕನ್ನಡಿಗರ ಸಾಮಥ್ರ್ಯ ಪ್ರದರ್ಶನ ಮಾಡಬೇಕಾಗುತ್ತದೆ ಎಂಬುದಾಗಿ ಎಚ್ಚರಿಸಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ನಮ್ಮ ಸರ್ಕಾರ ಕೇವಲ 5 ಕೋಟಿ ಅನುದಾನ ನೀಡಿದೆ. ಆದರೆ, ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ನೀಡಿದ್ದು, ಕೇವಲ ಉಪಚುನಾವಣೆಗಾಗಿ ಈ ರೀತಿ ಮರಾಠಿಗರನ್ನು ಓಲೈಸುವ ಹುನ್ನಾರ ನಡೆಸಿದೆ, ಈಗ ಮರಾಠ ಅಭಿವೃದ್ಧಿ ಪ್ರಾಧಿಕಾರ, ಮುಂದೆ ತಮಿಳು, ತೆಲುಗು, ಮಲಯಾಳಂ ಹೀಗೆ ಅನ್ಯ ರಾಜ್ಯಗಳ ಎಲ್ಲ ನಿವಾಸಿಗಳಿಗೂ ಅಭಿವೃದ್ಧಿ ಪ್ರಾಧಿಕಾರ ಮಾಡಿ ಕನ್ನಡಿಗರನ್ನು ಸರ್ಕಾರ ಅನಾಥರನ್ನಾಗಿ ಮಾಡಲು ಹೊರಟಿದೆ ಎಂದು ಗಂಭೀರ ಆರೋಪ ಮಾಡಿದರು.
ಪ್ರತಿಭಟನೆಯಲ್ಲಿ ಸರ್ಕಾರದ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಅವರು ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರು, ರೈತ ಮುಖಂಡರು, ಮಹಿಳಾ ಮುಖಂಡರೊಂದಿಗೆ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ಸಮಾಲೋಚನೆ ನಡೆಸುತ್ತೇವೆ ಎಂದರು.
ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಮಾತನಾಡಿ, ಗೋವಾದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯವಾಗುತ್ತಿದೆ. ಬೆಳಗಾವಿಯಲ್ಲಿ ಕನ್ನಡಿಗರಿಗೆ ರಕ್ಷಣೆ ಇಲ್ಲ. ಅವರ ಹಿತ ಕಾಯುವುದು ಬಿಟ್ಟು ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು ಹಾಸ್ಯಾಸ್ಪದವಾಗಿದೆ. ಕೂಡಲೇ ಈ ಕ್ರಮದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರಲ್ಲದೆ ರಾಜ್ಯದ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರೊಂದಿಗೆ ಚರ್ಚಿಸಿ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಿದರು.
ಈ ಪ್ರತಿಭಟನೆಯಲ್ಲಿ ಕೆ.ಆರ್.ಕುಮಾರ್, ಮಂಜುನಾಥ್ ದೇವು, ಗಿರೀಶ್ ಕುಮಾರ್, ಶಿವರಾಮೇಗೌಡ, ಪಾಲನೇತ್ರ, ಪ್ರವೀಣ್ ಕುಮಾರ್ ಶೆಟ್ಟಿ ಸೇರಿದಂತೆ ಕನ್ನಡಪರ ಸಂಘಟನೆ ಮುಖಂಡರ ಭಾಗವಹಿಸಿದ್ದರು.

Leave a Reply

Your email address will not be published.

Send this to a friend