ಚಿತ್ರದುರ್ಗ : ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ದೆಹಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ದೇಶದಾದ್ಯಂತ ಇಂದು ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಆರು ತಾಲೂಕುಗಳಲ್ಲಿ ರೈತರು ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಮೇಲೆ ಕೇಂದ್ರ ಸರ್ಕಾರ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ರೈತರು ಆರೋಪಿಸಿದರು.
ಚಿತ್ರದುರ್ಗ ಬೈಪಾಸ್ ಬಳಿ ಚಿತ್ರದುರ್ಗ – ದಾವಣಗೆರೆ ಹಾಗೂ ಹಿರಿಯೂರು- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ಎನ್ ಹೆಚ್ 4ರ ರಸ್ತೆ ಬಂದ್ ಮಾಡಿ ಕರ್ನಾಟಕ ರಾಜ್ಯ ರೈತ ಸಂಘ, ಕರವೇ ಸಂಘಟನೆ, ಹಸಿರು ಸೇನೆ, ಪ್ರಾಂತ ರೈತ ಸಂಘಟನೆ, ರೈತರ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ “ಮೋಡಿ ಮಾಡಿದ ಮೋದಿ ಎಂದು” ಘೋಷಣೆಗಳನ್ನು ಕೂಗಿದರು.
ಮೊಳಕಾಲ್ಮೂರು, ಹಿರಿಯೂರು, ಹೊಸದುರ್ಗ, ಚಳ್ಳಕೆರೆ, ಹೊಳಲ್ಕೆರೆ , ನಾಯಕನಹಟ್ಟಿ ಸೇರಿದಂತೆ ಜಿಲ್ಲೆಯ ಮತ್ತಿತರರ ಕಡೆಗಳಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿದರು.
ರೈತರ ಪ್ರತಿಭಟನೆಯಿಂದ ರಸ್ತೆಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಹಿರಿಯೂರಿನ ಪ್ರತಿಭಟನೆಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಸಾಥ್ ನೀಡಿದರು.