ಚಿತ್ರದುರ್ಗ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಅವರ ಪತಿ ಡಿ.ಟಿ.ಶ್ರೀನಿವಾಸ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶ ಹೊರಡಿಸಲಾಗಿರುವ ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಪಕ್ಷದಿಂದ ಟಿಕೆಟ್ ಬಯಸಿದ್ದರು. ಬಿಜೆಪಿಯಿಂದ ಶಿರಾದ ಚಿದಾನಂದ ಗೌಡ ಅವರಿಗೆ ಟಿಕೆಟ್ ನೀಡಿತ್ತು. ಡಿಟಿಎಸ್ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ನಾಮಪತ್ರ ವಾಪಸ್ ಪಡೆಯುವಂತೆ ಶ್ರೀನಿವಾಸ್ ಗೆ, ಡಿಸಿಎಂ ಅಶ್ವಥ್ ನಾರಾಯಣ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಮಾತುಕತೆ ನಡೆಸಿದ್ದರು. ಪಕ್ಷದದ ಮುಖಂಡರ ಮಾತಿಗೆ ಮಣೆ ಹಾಕದ ಶ್ರೀನಿವಾಸ್ ಬಂಡಾಯ ಅಭ್ಯರ್ಥಿಯಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದರು. ಪಕ್ಷದ ಸೂಚನೆಯನ್ನು ಕಡೆಗಣಿಸಿ, ಮುಜುಗರಕ್ಕೆ ಕಾರಣವಾಗಿರುವ ಶ್ರೀನಿವಾಸ್ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಆದೇಶ ಹೊರಡಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಪತಿ ಡಿ.ಟಿ. ಶ್ರೀನಿವಾಸ್ ಅವರು ಬಿಜೆಪಿ ಹಿಂದುಳಿದ ಮೋರ್ಚಾ ಉಪಾದ್ಯಕ್ಷರಾಗಿದ್ದರು. ಎಂಎಲ್‍ಸಿ ಅಥವಾ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಶ್ರೀನಿವಾಸ್ ಕಣದಲ್ಲಿದ್ದರು.
ಪಕ್ಷಕ್ಕೆ ಹಿನ್ನಡೆ :. ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ಪತಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರುವುದರಿಂದ ಬಿಜೆಪಿ ಪಕ್ಷಕ್ಕೆ ಬಹುತೇಕ ಹಿನ್ನಡೆಯಾಗಲಿದೆ ಎನ್ನಬಹುದು. ಹಿಂದಿನ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಗೊಲ್ಲ ಸಮುದಾಯದವರು ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಬೆಂಬಲಿಸಿದ್ದರು. ಇದೀಗ ಇವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರುವುದರಿಂದ ಶಿರಾ ಉಪಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಬಹುದು ಎನ್ನಲಾಗಿದೆ.