ಚಿತ್ರದುರ್ಗ : ಇಂದಿರಾ ಕ್ಯಾಂಟಿನ್ ಬಗ್ಗೆ ಲೋಪದೋಷಗಳು ಗಮನಕ್ಕೆ ಬಂದಿದೆ. ಇಂದಿರಾ ಕ್ಯಾಂಟಿನ್ ಲೋಪದೋಷಗಳನ್ನು ಸರಿಪಡಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಡಾ. ನಾರಾಯಣಗೌಡ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳಿಗೆ ಸಂಬಂದಪಟ್ಟಂತೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯವಹಿಸಿ ಮಾತನಾಡಿದರು.
ಬಡವರ ಹಸಿವು ನೀಗಿಸುವುದಕ್ಕಾಗಿ ಇಂದಿರಾ ಕ್ಯಾಂಟಿನ್ ಉತ್ತಮ ಯೋಜನೆಯಾಗಿದ್ದು, ಇದಕ್ಕಾಗಿ ಸರ್ಕಾರ ತಿಂಗಳಿಗೆ ರೂ.20 ಕೋಟಿ ಖರ್ಚು ಮಾಡುತ್ತಿವೆ. ಕೆಲವು ನಿಯಮಗಳನ್ನು ಹಾಕುವುದರ ಮೂಲಕ ಇಂದಿರಾ ಕ್ಯಾಂಟಿನ್ ಲೋಪದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು. ಇಂದಿರಾ ಕ್ಯಾಟಿಂನ್ ನಡೆಸುವ ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.
ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ, ಇಂದಿರಾ ಕ್ಯಾಂಟಿನ್ ಉತ್ತಮ ಯೋಜನೆಯಾಗಿದ್ದು, ಇಂದಿರಾ ಕ್ಯಾಂಟಿನ್‍ನಲ್ಲಿ ಸಿಸಿಟಿವಿ ಕ್ಯಾಮೇರಾ ಅಳವಡಿಸುವಂತೆ ಸಲಹೆ ನೀಡಿದರು.
ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ, ಚಿತ್ರದುರ್ಗ ನಗರದ ಯೂನಿಪಾರ್ಕ್ ಬಳಿ ಇರುವ ಇಂದಿರಾ ಕ್ಯಾಂಟಿನ್‍ನ್ನು ಜಿಲ್ಲಾ ಆಸ್ಪತ್ರೆ ಬಳಿ ಸ್ಥಳಾಂತರ ಮಾಡಿದರೆ ಹೆಚ್ಚು ಅನುಕೂಲವಾಗುತ್ತದೆ. ಜಿಲ್ಲಾ ಆಸ್ಪತ್ರೆಗೆ ಹೆಚ್ಚು ಗ್ರಾಮಾಂತರ ಪ್ರದೇಶಗಳಿಂದ ಜನರು ಆಗಮಿಸುತ್ತಾರೆ ಇದರಿಂದ ಬಹಳಷ್ಟು ಜನರಿಗೆ ಅನುಕೂಲವಾಗುತ್ತದೆ ಎಂದು ನಗರಸಭೆ ಪೌರಾಯುಕ್ತ ಜೆ.ಟಿ.ಹನುಮಂತರಾಜು ಅವರಿಗೆ ಸೂಚಿಸಿದರು.
ಶೀಘ್ರದಲ್ಲಿ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ : ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪ್ರಶ್ನಿಸಿ ಕೆಲವರು ಕೋರ್ಟ್ ಮೆಟ್ಟಿಲೇರಿದ್ದರಿಂದ ಆಯ್ಕೆ ಪ್ರಕ್ರಿಯೆ ಸ್ಥಗಿತಗೊಂಡಿದೆ. ಸರ್ಕಾರದಿಂದ ಈಗಾಗಲೇ ಉಪ ಸಮಿತಿ ನೇಮಕ ಮಾಡಿ ಸರಿಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಅದರಲ್ಲಿ 150 ಆಕ್ಷೇಪಣೆಗಳಿದ್ದವು. ಹಾಗಾಗಿ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಸ್ಥಾನ ಆಯ್ಕೆ ತಡವಾಗಿದೆ. ಶೀಘ್ರದಲ್ಲೆ ಆದೇಶ ಬರುವ ನಿರೀಕ್ಷೆ ಇದ್ದು, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಿಗೆ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಸಚಿವರು ಹೇಳಿದರು.
ರಾಜ ಕಾಲುವೆ ಒತ್ತುವರಿ ತೆರವುಗೊಳಿಸಿ: ರಾಜಕಾಲುವೆ ಒತ್ತುವರಿ ಮಾಡಿ ನಿವೇಶನ ನಿರ್ಮಾಣ ಮಾಡಲಾಗಿದೆ. ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಶಾಸಕರಾದ ಗೂಳಿಹಟ್ಟಿ ಡಿ.ಶೇಖರ್ ಮತ್ತು ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಸರ್ವೇ ಕಾರ್ಯ ಮಾಡಿಸಿ, ಒತ್ತುವರಿಯಾಗಿರುವ ರಾಜಕಾಲುವೆ ತೆರವುಗೊಳಿಸಲು ಅಗತ್ಯಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಆರು ಸಾವಿರ ಕಾಮಗಾರಿಗಳು ಸ್ಥಗಿತ: ಸುಮಾರು 12 ವರ್ಷಗಳಿಂದಲೂ ಕಾರಣಾಂತರಗಳಿಂದ ಪೌರಾಡಳಿತ ಇಲಾಖೆ ವ್ಯಾಪ್ತಿಯಲ್ಲಿ ಆರು ಸಾವಿರ ಕಾಮಗಾರಿಗಳು ನಿಂತಿವೆ. ಅಧಿಕಾರಗಳ ನಿರ್ಲಕ್ಷತನದಿಂದ ಕಾಮಗಾರಿಗಳು ಸ್ಥಗಿತಗೊಂಡಿವೆ. ಇಂತಹ ಅಧಿಕಾರಿಗಳ ಲೋಪದೋಷಗಳನ್ನು ತಿದ್ದುಪಡಿ ಮಾಡುವುದು ಅನಿವಾರ್ಯವಾಗಿದೆ ಸಚಿವ ನಾರಾಯಣಗೌಡ ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಗೂಳಿಹಟ್ಟಿ ಡಿ.ಶೇಖರ್, ಪೂರ್ಣಿಮಾ ಕೆ. ಶ್ರೀನಿವಾಸ್, ವಿಧಾನಪರಿಷತ್ ಸದಸ್ಯ ರಘು ಆಚಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬದರಿನಾಥ್, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಟಿ.ಯೋಗೇಶ ಸೇರಿದಂತೆ ತೋಟಗಾರಿಕೆ, ಪೌರಾಡಳಿತ ಹಾಗೂ ರೇಷ್ಮೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಫೋಟೋ ವಿವರ: ಚಿತ್ರದುರ್ಗದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಸಚಿವ ಡಾ.ನಾರಾಯಣ ಗೌಡ ಅಧ್ಯಕ್ಷತೆಯಲ್ಲಿ ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳಿಗೆ ಸಂಬಂದಪಟ್ಟಂತೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.