ಚಿತ್ರದುರ್ಗ : ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2020ರ ಚುನಾವಣಾ ವೇಳಪಟ್ಟಿಯನ್ನು ಪ್ರಕಟಿಸಿದ್ದು, ಜಿಲ್ಲೆಯ 189 ಗ್ರಾಮ ಪಂಚಾಯಿತಿಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ ಎಂಬುದಾಗಿ ಜಿಲ್ಲಾಧಿಕಾರಿ ಕವಿತಾ ಎಸ್ ಮಣ್ಣಿಕೇರಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನಲೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಗ್ರಾಮಾಂತರ ಪ್ರದೇಶಗಳಲ್ಲಿ ನವೆಂಬರ್ 30 ರಿಂದ ಡಿಸೆಂಬರ್ 31ರ ಸಂಜೆ 5.00 ಗಂಟೆವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಕೋವಿಡ್-19 ಮಾರ್ಗಸೂಚಿಯಂತೆ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಜಿಲ್ಲಾಡಳಿತ ಎಲ್ಲ ಅಗತ್ಯ ಸಿದ್ದತೆಗಳನ್ನು ಕೈಗೊಂಡಿದೆ ಎಂಬುದಾಗಿ ತಿಳಿಸಿದರು.
ಮೊದಲ ಹಂತದಲ್ಲಿ ಜಿಲ್ಲೆಯ ಮೂರು ತಾಲ್ಲೂಕುಗಳ 100 ಗ್ರಾಮ ಪಂಚಾಯಿತಿಗಳಿಗೆ ಹಾಗೂ ಎರಡನೇ ಹಂತದಲ್ಲಿ ಉಳಿದ ಮೂರು ತಾಲ್ಲೂಕುಗಳ 89 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲಾಗುವುದು ಎಂಬುದಾಗಿ ಹೇಳಿದರು.
ಮೊದಲ ಹಂತದ ಮತದಾನ ಡಿ.22 ರಂದು ಬೆಳಿಗ್ಗೆ 7.00 ರಿಂದ ಸಂಜೆ 5.00 ಗಂಟೆಯವರೆಗೆ ಚಿತ್ರದುರ್ಗ ತಾಲ್ಲೂಕಿನ 38 ಗ್ರಾಮ ಪಂಚಾಯಿತಿಗಳ 727 ಸದಸ್ಯ ಸ್ಥಾನಗಳು, ಹೊಸದುರ್ಗ ತಾಲ್ಲೂಕಿನ 33 ಗ್ರಾಮ ಪಂಚಾಯಿತಿಗಳ 493 ಸದಸ್ಯ ಸ್ಥಾನಗಳು ಹಾಗೂ ಹೊಳಲ್ಕೆರೆ ತಾಲ್ಲೂಕಿನ 29 ಗ್ರಾಮ ಪಂಚಾಯಿತಿಗಳ 533 ಸದಸ್ಯ ಸ್ಥಾನಗಳಿಗೆ ಮೊದಲ ಹಂತದಲ್ಲಿ ಚುನಾವಣೆ ಹಾಗೂ ಎರಡನೇ ಹಂತದ ಮತದಾನ ಡಿ.27ರಂದು ಬೆಳಿಗ್ಗೆ 7.00 ರಿಂದ ಸಂಜೆ 5.00 ಗಂಟೆಯವರೆಗೆ ಹಿರಿಯೂರು ತಾಲ್ಲೂಕಿನ 33 ಗ್ರಾಮ ಪಂಚಾಯಿತಿಗಳ 590 ಸದಸ್ಯ ಸ್ಥಾನಗಳು, ಚಳ್ಳಕೆರೆ ತಾಲ್ಲೂಕಿನ 40 ಗ್ರಾಮ ಪಂಚಾಯಿತಿಗಳ 755 ಸದಸ್ಯ ಸ್ಥಾನಗಳು ಹಾಗೂ ಮೊಳಕಾಲ್ಮುರು ತಾಲ್ಲೂಕಿನ 16 ಗ್ರಾಮ ಪಂಚಾಯಿತಿಗಳ 323 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದರು.
ಮೊದಲ ಹಂತದಲ್ಲಿ ಡಿಸೆಂಬರ್ 07ರಂದು ಚುನಾವಣೆ ಅಧಿಸೂಚನೆ. ಡಿಸೆಂಬರ್ 11 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಡಿ.12ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಡಿ.14 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ಡಿ.22ರಂದು ಬೆಳಿಗ್ಗೆ 7.00 ರಿಂದ ಸಂಜೆ 5.00ರವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅವಶ್ಯವಿದ್ದಲ್ಲಿ ಡಿಸೆಂಬರ್ 24 ರಂದು ನಡೆಸಲಾಗುವುದು. ಡಿ.30ರಂದು ಬೆಳಿಗ್ಗೆ 8.00 ಗಂಟೆಯಿಂದ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಲಿದೆ.
ಎರಡನೇ ಹಂತದಲ್ಲಿ ಡಿಸೆಂಬರ್ 11ರಂದು ಚುನಾವಣೆ ಅಧಿಸೂಚನೆ. ಡಿಸೆಂಬರ್ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಡಿ.17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಡಿ.19 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ಡಿ.27ರಂದು ಬೆಳಿಗ್ಗೆ 7.00 ರಿಂದ ಸಂಜೆ 5.00ರವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅವಶ್ಯವಿದ್ದಲ್ಲಿ ಡಿಸೆಂಬರ್ 29 ರಂದು ನಡೆಸಲಾಗುವುದು. ಡಿ.30ರಂದು ಬೆಳಿಗ್ಗೆ 8.00 ಗಂಟೆಯಿಂದ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಲಿದೆ.
ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮತಗಟ್ಟೆ ಪ್ರವೇಶಿಸುವ ಮೊದಲು ತಮ್ಮ ಕೈಗಳನ್ನು ಸ್ಯಾನಿಟೈಸ್ ಮಾಡಿಕೊಂಡು ಮತ ಚಲಾಯಿಸುವುದು. ಕೋವಿಡ್ ಸೋಂಕಿತರು ಹಾಗೂ ಕೋವಿಡ್ ಶಂಕಿತರನ್ನು ಅಗತ್ಯ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಸಂಬಂಧಪಟ್ಟ ಮತಗಟ್ಟೆಗಳಿಗೆ ಮತದಾನದ ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಕರೆತಂದು ಮತದಾನದ ನಂತರ ಅವರನ್ನು ಸ್ವಸ್ಥಾನಕ್ಕೆ ಮರಳಿ ಕರೆದುಕೊಂಡು ಹೋಗುವುದು.
ಕಳೆದ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇ.85.62 ಮತದಾನವಾಗಿತ್ತು. ಈ ಬಾರಿ ಹೆಚ್ಚಿನ ಮತದಾನಕ್ಕೆ ಅಗತ್ಯ ಕ್ರಮಕೈಗೊಂಡಿದ್ದು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸ್ವೀಪ್ ಕಾರ್ಯಕ್ರಮದ ಜವಾಬ್ದಾರಿ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮಣ್ಣಿಕೇರಿ ತಿಳಿಸಿದರು. ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪ ಹಾಗೂ ಚುನಾವಣಾ ಶಾಖೆಯ ಸಿಬ್ಬಂದಿ ಹಾಜರಿದ್ದರು.