ಚಿತ್ರದುರ್ಗ : ಭದ್ರಾ ಮೇಲ್ದಂಡೆ ಯೋಜನೆಗಾಗಿ ಭೂ ಸ್ವಾಧೀನ ಮಾಡಿಕೊಳ್ಳುತ್ತಿದ್ದು ರೈತರ ಭೂಮಿಗೆ ಸೂಕ್ತ ಮಾರುಕಟ್ಟೆ ಮೌಲ್ಯದ ಪರಿಹಾರ ನೀಡಬೇಕಲ್ಲದೆ ಭದ್ರಾ ಮೇಲ್ದಂಡೆ ಕಾಮಗಾರಿ ನಿಗದಿ ಅವಧಿಯೊಳಗೆ ಪೂರ್ಣಗೊಳಿಸಿ ರೈತರಿಗೆ ನೀರು ಹರಿಸುವ ಕಾರ್ಯ ಮಾಡಬೇಕು ಎಂಬುದಾಗಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಸೂಚನೆ ನೀಡಿದರು.
ತಾಲೂಕಿನ ಬೆಳಗಟ್ಟ ಗ್ರಾಮದಲ್ಲಿ ಮಂಗಳವಾರ ಭದ್ರಾ ಮೇಲ್ದಂಡೆ ಯೋಜನೆ ಅಡಿಯಲ್ಲಿ ನಡೆದ ಚಿತ್ರದುರ್ಗ ಶಾಖಾ ಕಾಲುವೆ ನಿರ್ಮಾಣಕ್ಕೆ ಭೂ ಸ್ವಾಧೀನ ಪಡಿಸಿಕೊಳ್ಳುತ್ತಿರುವ ಜಮೀನುಗಳ ರೈತರಿಗೆ ಪುನರ್ವಸತಿ ಮತ್ತು ಪುನರ್ ವ್ಯವಸ್ಥೆ ಅಹವಾಲು ಸ್ವೀಕಾರ ಸಮಾರಂಭ ಉದ್ಘಾಟನೆ ಮಾಡಿ ನಂತರ ಅವರು ಮಾತನಾಡಿದರು.
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ವಿಳಂಬಕ್ಕೆ ಅವಕಾಶ ನೀಡದಂತೆ ಆದಷ್ಟು ಬೇಗ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪ, ತಹಶೀಲ್ದಾರ್ ಜೆ.ಸಿ.ವೆಂಕಟೇಶಯ್ಯ, ಭದ್ರಾ ಮೇಲ್ದಂಡೆ ಕಾಮಗಾರಿಯ ಕಾರ್ಯಪಾಲಕ ಇಂಜಿನಿಯರ್ ಶ್ರೀಧರ್, ವಿಶೇಷ ಭೂಸ್ವಾಧೀನ ಅಧಿಕಾರಿ ಹರಿಶಿಲ್ಪಾ, ನೂರಾರು ರೈತರು ಹಾಜರಿದ್ದರು.