ತುಮಕೂರು : ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ ಹಿಂದುಳಿದ ವರ್ಗಗಳ ಯುವ ನಾಯಕ ಹಾಗೂ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಡಾ.ಸತೀಶ್ ಸಾಸಲು ಅವರನ್ನು ನೇಮಕಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಡಾ. ಸತೀಶ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಸತೀಶ್ ಎಸ್ ಎನ್ ಇವರು ತಕ್ಷಣದಿಂದ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕೆಪಿಸಿಸಿ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ, ಬಲವರ್ಧನೆಗೆ ಕಾರ್ಯೋನ್ಮುಖರಾಗುವಂತೆ ಸೂಚಿಸಿದ್ದಾರೆ. ಇದರ ಜೊತೆಗೆ ತಮಗೆ ಹೆಚ್ಚಿನ ಯಶಸ್ಸು ಸಿಗಲೆಂದು ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ.
ಡಾ. ಸಾಸಲು ಸತೀಶ್ ಒಮ್ಮೆ ಚಿಕ್ಕನಾಯಕನಹಳ್ಳಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ನಂತರ ಈ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಆಗಿದ್ದರು. ಕೊನೆ ಗಳಿಗೆಯಲ್ಲಿ ಸತೀಶ್ ಗೆ ಟಿಕೆಟ್ ತಪ್ಪಿಸಿ ಸಂತೋಷ್ ಜಯಚಂದ್ರ ಅವರಿಗೆ ನೀಡಿದ್ದರು. ಸತೀಶ್ ಟಿಕೆಟ್ ಸಿಗದಿದ್ದರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಒಡನಾಟ ಇಟ್ಟುಕೊಂಡು ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸುತಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕನಾಯಕನಹಳ್ಳಿ ಅಥವಾ ಹಿರಿಯೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.