ಬೆಂಗಳೂರು: ರಾಜ ರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಅಖಾಡ ರಂಗೇರುತ್ತಿದ್ದು ಇಂದು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ , ಬಿಜೆಪಿಯಿಂದ ಮುನಿರತ್ನ, ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದ್ದಾರೆ. ಆರ್.ಆರ್.ನಗರ ಉಪಚುನಾವಣೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಗಳಿವೆ.
ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸಹ 11.45ಕ್ಕೆ ನಾಮಪತ್ರ ಸಲ್ಲಿಸಿ, ಇಂದು ನನ್ನ ಪಾಲಿಗೆ ಅತ್ಯಂತ ಮಹತ್ವದ ದಿನ. ನನ್ನ ಇಷ್ಟದ ದೇವರು ಆಂಜನೇಯನ ದರ್ಶನ ಮಾಡಿದ್ದೇನೆ. ದೇವರ ಪೂಜೆ ಬಳಿಕ ಹೊಸ ಶಕ್ತಿ ಬಂದಿದೆ. ಇಂತಹ ಅವಕಾಶ ಸಿಕ್ಕಿದ್ದಕ್ಕೆ ನಾನು ಯಾವಾಗಲೂ ಚಿರಋಣಿ. ತುಂಬಾ ಭಾವನಾತ್ಮಕ ದಿನ ಎಂದು ಹೇಳಿದರು. ಕುಸುಮಾ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಸೇರಿದಂತೆ ಮತ್ತಿತರರು ಸಾಥ್ ನೀಡಿದರು.