ಶಿರಾ ಬೈ ಎಲೆಕ್ಷನ್ ಕಾಂಗ್ರೆಸ್ಸಿನ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ ಆಯ್ಕೆ !.

ಬೆಂಗಳೂರು : ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಚಿವ ಟಿ.ಬಿ ಜಯಚಂದ್ರ ಅವರನ್ನು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಜಯಚಂದ್ರ ಅವರ ಹೆಸರು ಪಕ್ಷದ ಹೈಕಮಾಂಡ್ ಗೆ ಕಳುಹಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.

ಶಿರಾ ಉಪಚುನಾವಣೆ ಸಂಬಂಧ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ಸಿನ ಪ್ರಮುಖ ನಾಯಕರೊಂದಿಗೆ ಬುಧವಾರ ಸಭೆ ನಡೆಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

‘ ಶಿರಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಮಾಜಿ ಸಚಿವ ಟಿ.ಬಿ ಜಯಚಂದ್ರ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚಿಸಿದ್ದೇವೆ. ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರೇ ಜಯಚಂದ್ರ ಅವರ ಹೆಸರನ್ನು ಸೂಚಿಸಿದ್ದಾರೆ. ಅವರ ಅಭಿಪ್ರಾಯ ಪಡೆದಿದ್ದು, ಇದನ್ನೇ ಪಕ್ಷದ ಹೈಕಮಾಂಡ್ ಗೆ ಕಳುಹಿಸಿಕೊಡುತ್ತೇವೆ ಎಂದು ತಿಳಿಸಿದರು.

ಉಪ ಚುನಾವಣೆಗೆ ಸಂಬಂಧಪಟ್ಟಂತೆ ಇಂದು ತುಮಕೂರು ಜಿಲ್ಲೆಯ ನಾಯಕರ ಜೊತೆ ಸಮಾಲೋಚನೆ ನಡೆಸಲಾಯಿತು.

ಶಿರಾ ಉಪಚುನಾವಣೆಯನ್ನು ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರ ನೇತೃತ್ವದಲ್ಲಿ ಎದುರಿಸಲು ಪಕ್ಷ ತೀರ್ಮಾನಿಸಿದ್ದು, ಮಾಜಿ ಶಾಸಕ ಕೆ.ಎನ್ ರಾಜಣ್ಣ ಅವರು ಕೋಚೇರ್ಮನ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದರು. ಎಲ್ಲ ನಾಯಕರು ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ ಇಂದಿನಿಂದ ಚುನಾವಣೆ ಕಾರ್ಯ ಪ್ರಾರಂಭ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಶಿರಾ ಉಪಚುನಾವಣೆ ಸಂಬಂಧಿಸಿದಂತೆ ನಿನ್ನೆ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಡಾ ಸಾಸಲು ಸತೀಶ್ ಜೊತೆ ಡಿಕೆಶಿ ಸಭೆ ನಡೆಸಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಿರಾ ದಿಂದ ಜಯಚಂದ್ರ ಸೋಲು ಅನುಭವಿಸಿದ್ದರು. ಈ ಘಟನೆ ಮತ್ತೆ ಮರುಕಳಿಸದಂತೆ ಸತೀಶ್ ಗೆ ಡಿಕೆಶಿ ಚರ್ಚಿಸಿದ್ದು, ಜಯಚಂದ್ರ ಅವರ ಗೆಲುವಿಗೆ ಸಹಾಕರಿಸಲು ತಿಳಿಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಡುಗೊಲ್ಲರಿಗೆ ಸ್ಥಾನ ಮಾನ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published.

Send this to a friend